ರಾಜ್ಯರಾಷ್ಟ್ರೀಯ

ವಕ್ಫ್‌ ಆಸ್ತಿ ಕಬಳಿಕೆ ವಿಚಾರ: ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ ವಿಜಯೇಂದ್ರ

ಬೆಂಗಳೂರು: ವಕ್ಫ್‌ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ ಎಂದು ಕಾಂಗ್ರೆಸಿಗರು ಹೇಳುತ್ತಿದ್ದಾರೆ. ಪ್ರಧಾನಮಂತ್ರಿ ಮೋದಿ ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.


ಅನ್ವರ್ ಮಾಣಿಪ್ಪಾಡಿ ವರದಿಯಲ್ಲಿರುವುದು ಕಾಂಗ್ರೆಸ್ಸಿಗರು ಆಕ್ರಮಿಸಿರುವ ವಕ್ಫ್ ಆಸ್ತಿಗಳ ಕುರಿತೇ ಹೊರತು ಬಿಜೆಪಿಯವರದ್ದು ಅಲ್ಲ. ಕಾಂಗ್ರೆಸಿಗರ ವಿರುದ್ಧ ಇರುವ ಆರೋಪಕ್ಕೆ ಯಾರಾದರೂ 150 ಕೋಟಿ ರೂಪಾಯಿಗಳ ಆಮಿಷವನ್ನು ಒಡ್ಡಲು ಸಾಧ್ಯವೇ ಎಂಬ ಕನಿಷ್ಠ ವಿವೇಕವೂ ನಿಮಗಿಲ್ಲವಲ್ಲ ಎಂದಿರುವ ವಿಜಯೇಂದ್ರ ಅವರು ತಲೆಬುಡವಿಲ್ಲದ ಆರೋಪವನ್ನು ಮಾಡಿ ನೀವು ಹಾಗೂ ನಿಮ್ಮ ಸಂಪುಟದ ಸಚಿವ ಪ್ರಿಯಾಂಕ್ ಖರ್ಗೆ ಸಂಭ್ರಮಿಸುತ್ತಿರುವುದು ನಿಮ್ಮ ಬಾಲಿಶತನವನ್ನು ತೋರಿಸುತ್ತಿದೆಯೇ ಹೊರತು ನಿಮ್ಮ ರಾಜಕೀಯ ಜಾಣ್ಮೆಯನ್ನಲ್ಲ. ನಿಮಗೆ ಧೈರ್ಯವಿದ್ದರೆ ಉಚ್ಛ ನ್ಯಾಯಾಲಯದಲ್ಲಿರುವ ನಿಮ್ಮ ವಿರುದ್ಧದ ಮುಡಾ ಹಗರಣವನ್ನು ಸಿಬಿಐ ತನಿಖೆ ಕೋರಿದ ರಿಟ್ ಅರ್ಜಿಗೆ ಆಕ್ಷೇಪವೆತ್ತದೆ ಸಿಬಿಐ ತನಿಖೆ ನಡೆಯಲು ಅವಕಾಶ ಮಾಡಿಕೊಡಿ ನೋಡೋಣ ಎಂದು ವಿಜಯೇಂದ್ರ ಸವಾಲು ಹಾಕಿದ್ದಾರೆ.

ಸಿಬಿಐ, ಇಡಿ ತನಿಖೆಗಳಿಗೆ ಬೆಚ್ಚಿಬಿದ್ದಿರುವ ನೀವು ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಘಟಾನುಘಟಿ ಹಿರಿಯ ವಕೀಲರನ್ನು ದಿಲ್ಲಿಯಿಂದ ಕರೆಸಿಕೊಂಡು ಕಾನೂನು ರಕ್ಷಣೆ ಪಡೆಯಲು ವ್ಯರ್ಥ ಪ್ರಯತ್ನ ನಡೆಸಿದಿರಿ. ಉಚ್ಚ ನ್ಯಾಯಾಲಯದ ತೀರ್ಪಿನಿಂದ ಮುಖಭಂಗಕ್ಕೀಡಾದ ನಿಮಗೆ ಇನ್ನೊಬ್ಬರ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲು ಯಾವ ನೈತಿಕತೆ ಇದೆ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹರಣ ಸೇರಿದಂತೆ ಹತ್ತು ಹಲವು ಭ್ರಷ್ಟಾಚಾರದ ಆರೋಪಗಳು ನಿಮ್ಮ ಹಾಗೂ ನಿಮ್ಮ ಸರ್ಕಾರದ ಕೊರಳಿಗೆ ಸುರಳಿಯಾಗಿ ಸುತ್ತಿಕೊಂಡಿವೆ, ಹೇಗಾದರೂ ಮಾಡಿ ಈ ಹಗರಣದಿಂದ ಬಚಾವಾಗಲೇಬೇಕೆಂದು ನಿಮ್ಮ ಕೈ ಕೆಳಗಿನ ಅಧಿಕಾರಿಗಳು ನಡೆಸುವ ಲೋಕಾಯುಕ್ತದ ತನಿಖೆಯಲ್ಲಿ ಕ್ಲೀನ್‌ಚಿಟ್ ಪಡೆದುಕೊಳ್ಳಲು ಮುಖ್ಯಮಂತ್ರಿ ಸ್ಥಾನದ ಅಧಿಕಾರವನ್ನೆಲ್ಲಾ ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ನೀವು ಹತಾಶರಾಗಿ ತಲೆಬುಡವಿಲ್ಲದ ಕಪೋಲಕಲ್ಪಿತ ವಿಷಯ ಹಿಡಿದುಕೊಂಡು ಬ್ರಹ್ಮಾಸ್ತ್ರವೆಂದು ಭ್ರಮಿಸಿ ಪ್ರಯೋಗಿಸಲು ಹೊರಟಿದ್ದೀರಿ ಎಂದು ಟೀಕಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!