ಕರಾವಳಿರಾಜಕೀಯರಾಜ್ಯ

ತಮ್ಮ ಕುರ್ಚಿ ಉಳಿಸಿಕೊಳ್ಳಲು ವಿಜಯೇಂದ್ರರಿಂದ ಜನಾಕ್ರೋಶ ಯಾತ್ರೆ: ಸಿದ್ದರಾಮಯ್ಯ

ವಿಜಯೇಂದ್ರ ಅವರು ತಮ್ಮ ಕುರ್ಚಿ(ಅಧ್ಯಕ್ಷ ಸ್ಥಾನ) ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆಯೇ ಹೊರತು ಬೇರೆ ಯಾವ ಸಾರ್ವಜನಿಕ ಹಿತಾಸಕ್ತಿಯ ಸದುದ್ದೇಶ ಖಂಡಿತ ಈ ಯಾತ್ರೆಗೆ ಇಲ್ಲ’ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Oplus_131072

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಮತ್ತು ಬೆಲೆ ಏರಿಕೆ ವಿಪರೀತವಾಗಿದೆ ಎಂದು ಆರೋಪಿಸಿ ಬಿಜೆಪಿ 16 ದಿನಗಳ ಜನಾಕ್ರೋಶ ಯಾತ್ರೆ ಆಯೋಜಿಸಿದೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ ಬಿಜೆಪಿ ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ ನೆರವಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ ಎಂದಿದ್ದಾರೆ.



ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ “ಪೇಮೆಂಟ್ ಸೀಟ್” ನಲ್ಲಿ ಕೂತಿರುವ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ನಮ್ಮನ್ನು ಪ್ರಶ್ನಿಸುವ ಮೊದಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಶಾಸಕ ಮಿತ್ರರು ಕಳೆದೆ ಎರಡು ವರ್ಷಗಳಿಂದ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ದಮ್ಮು ತಾಕತ್ ತೋರಿಸಲಿ ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

ವಿಜಯೇಂದ್ರ ವಿರುದ್ಧ ಸ್ವಪಕ್ಷೀಯರು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳು ಅವರ ಪಕ್ಷದ ಹೈಕಮಾಂಡಿಗೂ ಮನವರಿಕೆಯಾದಂತಿದೆ. ಪಕ್ಷದೊಳಗಿದ್ದು ಮಾಡುವ ಆರೋಪಗಳಿಂದ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗೆ ಹಾಕಿ, ಅವರಿಂದ ಈಗ ಇನ್ನಷ್ಟು ಆರೋಪಗಳನ್ನು ಮಾಡಿಸುತ್ತಿದೆ. ಅಂತಿಮವಾಗಿ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದೇ ಬಿಜೆಪಿ ಹೈಕಮಾಂಡ್ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!