ಪುತ್ತೂರು: ಪೋಕ್ಸೋ ಪ್ರಕರಣದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ
ಪುತ್ತೂರು: 7 ವರ್ಷಗಳ ಹಿಂದೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ತಾಲೂಕಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆರೋಪಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಗದಗ ಜಿಲ್ಲೆಯ ನಿವಾಸಿ ಪೀರೇಶ್ ಪೀರಪ್ಪ ಸಂಗಪ್ಪ ಮಾಲೋತ್ತರ ಎಂಬಾತನಿಗೆ ದ.ಕ. ಜಿಲ್ಲೆಯ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2007ರ ಅಗಸ್ಟ್ ತಿಂಗಳಲ್ಲಿ ಆರೋಪಿಯು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆಕೆಯ ಮೊಬೈಲ್ ಚಾರ್ಜ್ ಮಾಡಲೆಂದು ತನ್ನ ಬಾಡಿಗೆ ಮನೆಗೆ ಪುಸಲಾಯಿಸಿ ಕರೆದೊಯ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿರುವುದು ಮತ್ತು ಬಳಿಕದ ದಿನಗಳಲ್ಲಿ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದ ಎಂದು ಆರೋಪಿಸಲಾಗಿತ್ತು.
ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಪೊಕ್ಸ್ ವಿಶೇಷ ನ್ಯಾಯಾಲಯ ಪ್ರಕರಣದಲ್ಲಿ ಒಟ್ಟು 18 ಸಾಕ್ಷಿಗಳನ್ನು ವಿಚಾರಣೆ ನಡೆಸಿತ್ತು. ಜೊತೆಗೆ ಬಾಲಕಿಯ ವೈದ್ಯಕೀಯ ತಪಾಸಣೆ, ಡಿಎನ್ಎ ಪರೀಕ್ಷೆ ವರದಿಯ ಉಲ್ಲೇಖಿಸಲಾಗಿತ್ತು.
ನ್ಯಾಯಾಧೀಶೆ ಸರಿತಾ ಡಿ. ಅವರು ಆರೋಪಿಗೆ ಭಾ.ದಂ.ಸಂ. ಕಲಂ 376 ರಡಿ ಅಪರಾಧಕ್ಕೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 20ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಾದಾ ಶಿಕ್ಷೆ ಮತ್ತು ಭಾ.ದಂ. ಸಂ. ಕಲಂ 506 ರಡಿ ಅಪರಾಧಕ್ಕೆ 2 ವರ್ಷಗಳ ಸಾದಾ ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಶಿಕ್ಷೆ ಮತ್ತು ಪೊಕ್ಕೊ ಕಾಯ್ದೆಯಡಿ ಅಪರಾಧಕ್ಕೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಕಾರಾಗೃಹ ಶಿಕ್ಷೆಯನ್ನು ವಿಧಿಸಿದ್ದಾರೆ.
ದಂಡ ಪ್ರಕ್ರಿಯಾ ಸಂಹಿತೆ ಕಲಂ 357ಎ ಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬಾಲಕಿಗೆ 6 ಲಕ್ಷ ರೂ. ಪರಿಹಾರ ರೂಪವಾಗಿ ನೀಡಬೇಕೆಂದು ಆದೇಶಿಸಿದೆ. ಸರಕಾರದ ಪರ ಪೊಕ್ಕೊ ವಿಶೇಷ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ವಾದಿಸಿದ್ದರು





