ಸೌಜನ್ಯಾ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ
ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೆ.1ರಂದು ಸೌಜನ್ಯಾ ಮನೆಗೆ ಭೇಟಿ ನೀಡಿದ್ದಾರೆ.

ಧರ್ಮಸ್ಥಳದಲ್ಲಿ ನಡೆದ ಸಮಾವೇಶದ ಬಳಿಕ ವಿಜಯೇಂದ್ರ ನೇರವಾಗಿ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ 13ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದ ಸೌಜನ್ಯಾಳ ಮನೆಗೆ ತೆರಳಿ ಸೌಜನ್ಯಾ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು.
ಕುಸುಮಾವತಿ ತನ್ನ ವಿರುದ್ದ ನಡೆಯುತ್ತಿರುವ ಅಪಪ್ರಚಾರಗಳ ಬಗ್ಗೆ ವಿಜಯೇಂದ್ರ ಅವರ ಗಮನ ಸೆಳೆದರು. ಈ ವೇಳೆ ಮಾತನಾಡಿದ ವಿಜಯೇಂದ್ರ ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾದರೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಸಂಸದ ಕ್ಯಾ.ಬ್ರಿಜೇಶ್ ಚೌಟ ಮತ್ತಿತರರು ಉಪಸ್ಥಿತರಿದ್ದರು.



