ಕಲ್ಲುಗುಂಡಿ: ಕಾರು ಮತ್ತು ಟ್ಯಾಂಕರ್ ನಡುವೆ ಅಪಘಾತ, ಮಹಿಳೆ ಮೃತ್ಯು
ಸುಳ್ಯ: ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪದ ಕಡೆಪಾಲ ಎಂಬಲ್ಲಿ ಸೆ.3ರಂದು ನಡೆದಿರುವುದು ವರದಿಯಾಗಿದೆ.
ಕೊಡಗು ಜಿಲ್ಲೆಯ ಸಿದ್ದಾಪುರದ ನೆಲ್ಲಿಹುದುಕೇರಿ ನಿವಾಸಿ ಶೋಭಾ ಪಿ. (47) ಮೃತಪಟ್ಟವರು.

ಕಾರು ಚಾಲಕ ದೇವಯ್ಯ(48), ವನಜಾಕ್ಷಿ (45) ಎಂಬವರು ಗಂಭೀರ ಗಾಯಗೊಂಡಿದ್ದು ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಲಾರಿ ಹಾಗೂ ಸುಳ್ಯದಿಂದ ಮಡಿಕೇರಿಗೆ ತೆರಳುತ್ತಿದ್ದ ಡಸ್ಟರ್ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.