ಮನೆ ಕಳ್ಳತನ ಪ್ರಕರಣ: ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು
ಮಂಗಳೂರು: ಮನೆಯಿಂದ ಕಳ್ಳತನ ನಡೆಸಿದ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರದ ಗೋರಿಗುಡ್ಡದಲ್ಲಿ ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬುಧವಾರ ಬೆಳಗ್ಗೆ ಗೋರಿಗುಡ್ಡ ಪರಿಸರದಲ್ಲಿ ನಾಲ್ವರು ಮಹಿಳೆಯರು ಶಂಕಾಸ್ಪದ ರೀತಿಯಲ್ಲಿ ತಿರುಗಾಡುತ್ತಿರುವ ಬಗ್ಗೆ ವ್ಯಕ್ತಿಯೊಬ್ಬರು 112ಕ್ಕೆ ಕರೆ ಮಾಡಿ ತಿಳಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಮೂಲದ ಶಿವಗಾಮಿ ಬಂಧಿತ ಆರೋಪಿ. ಈಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ವಿಚಾರಣೆ ವೇಳೆ ಓರ್ವ ಮಹಿಳೆ ಈ ಹಿಂದೆ ಕದ್ರಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ದರೋಡೆ ಪ್ರಕರಣವೊಂದರ ಆರೋಪಿಯಾಗಿದ್ದು, ತಲೆಮರೆಸಿಕೊಂಡಿರುವುದು ಬೆಳಕಿಗೆ ಬಂದಿದೆ.
ಬಳಿಕ ಆಕೆಯನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ. ಉಳಿದ ಮೂವರು ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿಲ್ಲದ ಕಾರಣ ಎಚ್ಚರಿಕೆ ನೀಡಿ ಅವರನ್ನು ಬಿಟ್ಟು ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.





