ವಾಹನ, ಸರಗಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ವಾಹನ ಹಾಗೂ ಸರಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲದ ಫೈಝಲ್ ಯಾನೆ ತೋಟ ಫೈಝಲ್ ಮತ್ತು ಮೈಸೂರು ವಿನಾಯಕ ನಗರದ ನಿತೀನ್ ಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ 1,20,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಿಸಿದ 45 ಸಾವಿರ ರೂ. ಮೌಲ್ಯದ ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಡಿ.12ರಂದು ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಕದ್ರಿ ಅಪರಾಧ ವಿಭಾಗದ ಸಿಬ್ಬಂದಿಗೆ ದೊರೆತ ಖಚಿತ ಮಾಹಿತಿಯಂತೆ ಡಿ.16ರಂದು ಪ್ರಕರಣದ ಪ್ರಮುಖ ಆರೋಪಿ ಫೈಝಲ್ ಮತ್ತು ನಿತೀನ್ ಕುಮಾರ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಡಿ.13ರಂದು ಭಟ್ಕಳ ಗ್ರಾಮಿಣ ಪೊಲೀಸ್ ಠಾಣಾ ಸರಹದ್ದಿನ ಗರ್ಡಿ ಹಿತ್ತು ಬೆಳಕೆ ಎಂಬಲ್ಲಿ ವಯೋವೃದ್ಧೆ ಹೊನ್ನಮ್ಮ ಮಹಾದೇವ ನಾಯ್ಕ ಎಂಬವರ ಕುತ್ತಿಗೆಯಿಂದ ಚಿನ್ನದ ಚೈನ್‌ನ್ನು ಕಸಿದುಕೊಂಡು ಪರಾರಿಯಾದ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಕೂಡಾ ಬಾಯಿಬಿಟ್ಟಿದ್ದಾರೆ. ಆರೋಪಿಗಳಿಂದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.



