ಕರಾವಳಿಕ್ರೈಂ

ಬಂಟ್ವಾಳ: ಮಾದಕ ವಸ್ತು ಸೇವನೆ; ಪೊಲೀಸರ ದಾಳಿ, ಓರ್ವನ ಬಂಧನ


ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ತಂಡವೊಂದರ ಮೇಲೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾ30ರಂದು ಸಂಜೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನೆಹರೂ ನಗರ ಎಂಬಲ್ಲಿ ಕೆಲವು ವ್ಯಕ್ತಿಗಳು ಮಾದಕ ವಸ್ತು ಸೇವಿಸಿ, ನಶೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.
ಮಾಹಿತಿ ಸಿಗುತ್ತಿದ್ದಂತೆ ಬಂಟ್ವಾಳ ನಗರ ಪೊಲೀಸ್ ಠಾಣಾ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರು ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಧಾವಿಸಿದರು. ಈ ವೇಳೆ ಅಲ್ಲೇ ಮೈದಾನದಲ್ಲಿ ನಿಂತಿದ್ದ ಕಾರಿನಲ್ಲಿದ್ದ ವ್ಯಕ್ತಿಗಳು ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದಾರೆ.


ಪೊಲೀಸರು ಬೆನ್ನಟ್ಟಿ ಓರ್ವನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಆತನನ್ನು ಬಂಟ್ವಾಳ ಸಜಿಪ ಮೂಡ ನಿವಾಸಿ ಶಾಕೀರ್ (28) ಎಂದು ಗುರುತಿಸಲಾಗಿದೆ. ವಿಚಾರಣೆಯ ವೇಳೆ ತಾನು ಹಾಗೂ ತನ್ನೊಂದಿಗಿದ್ದ ಅಸೀಪ್, ಸಿದ್ದಿಕ್ ಮತ್ತು ಇರ್ಷಾದ್ ಎಂಬವರು ಒಟ್ಟಾಗಿ ಮಾದಕ ವಸ್ತು ಸೇವಿಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.
ಬಂಧಿತ ಶಾಕೀರ್‌ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಉಳಿದ ಮೂವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!