ದೇವಸ್ಥಾನದಿಂದ ಕಾಣಿಕೆ ಹುಂಡಿ ಕಳವು ಪ್ರಕರಣ: ಆರೋಪಿಯ ಬಂಧನ
ಮಂಗಳೂರು: ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಕಾಣಿಕೆ ಹುಂಡಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ದಿಂಡಿಗುಲ್‌ನ ಶಬಿಕ್ ಅಹ್ಮದ್ ಶೇಖ್ ಅಬ್ದುಲ್ ಖಾದರ್ (25) ಬಂಧಿತ ಆರೋಪಿ.
ಮಾ.3ರಂದು ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿ, 3 ಕಾಣಿಕೆ ಹುಂಡಿ ಗಳಲ್ಲಿದ್ದ ಸುಮಾರು 25,000 ರೂ. ಹಣವನ್ನು ಕಳ್ಳತನ ಮಾಡಿರುವ ಬಗ್ಗೆ ಬಜ್ಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಜ್ಜೆ ಪೊಲೀಸರು ಖಚಿತ ಮಾಹಿತಿಯ ಆಧಾರದ ಆರೋಪಿ ಶಬಿಕ್ ಅಹ್ಮದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ, ಕಳ್ಳತನ ಕೃತ್ಯವನ್ನು ಒಪ್ಪಿಕೊಂಡಿದ್ದು, ಕಳವಾಗಿದ್ದ ಕಾಣಿಕೆ ಹುಂಡಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸರ ಪ್ರಕಟನೆ ತಿಳಿಸಿದೆ.
ಆರೋಪಿ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕಳ್ಳತನ ಮಾಡಿ, ಮತ್ತೆ ತಮಿಳುನಾಡಿಗೆ ತೆರಳಿ ತಪ್ಪಿಸಿಕೊಳ್ಳುವ ಪ್ರವೃತ್ತಿ ಹೊಂದಿದವನಾಗಿದ್ದು, ಬಜ್ಜೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಮತ್ತು ಠಾಣಾ ಕ್ರೈಂ ಸಿಬ್ಬಂದಿ ನೂತನ್, ರಾಜೇಶ್ ಮತ್ತು ಪ್ರಕಾಶ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ



