ಉಪ್ಪಿನಂಗಡಿ: ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು ಆರೋಪ-ಪ್ರಕರಣ ದಾಖಲು
ಬೆಳ್ತಂಗಡಿ: ಮನೆಯ ಹೋರಿ ಹಾಯ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮೊದಲಿಗೆ ಚಿಕಿತ್ಸೆ ನೀಡಿದ ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೇರುಕಟ್ಟೆ ನಿವಾಸಿ ಮಹಮ್ಮದ್ ಶರೀಫ್ ಪಿ (35) ಮೃತಪಟ್ಟ ದುರ್ದೈವಿ. ಈ ಸಂಬಂಧ ಮೃತರ ಸಹೋದರ ನಾಸಿರುದ್ದೀನ್.ಪಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೇ 14ರಂದು ರಾತ್ರಿ ಮಹಮ್ಮದ್ ಶರೀಫ್ ಅವರಿಗೆ ಮನೆಯಲ್ಲಿದ್ದ ಹೋರಿ ಹಾಯ್ದು ಗಾಯಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಲ್ಲಿನ ವೈದ್ಯರು ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡಿದ ಕಾರಣ ಶರೀಫ್ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬಳಿಕ ಮೇ 16ರಂದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೇ 20ರಂದು ಮಹಮ್ಮದ್ ಶರೀಫ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಹೋದರ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ಸಂಖ್ಯೆ: 28/2026, ಕಲಂ: 194(3) (iv) ಬಿ.ಎನ್.ಎಸ್.ಎಸ್ (BNSS) ನಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿಬಂದಿರುವುದರಿಂದ, ಇದರ ಸತ್ಯಾಸತ್ಯತೆ ಪರಿಶೀಲಿಸಿ ವರದಿ ನೀಡಲು ವಿಶೇಷ ವೈದ್ಯಕೀಯ ತಂಡವನ್ನು ರಚಿಸುವಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಪತ್ರವ್ಯವಹಾರ ನಡೆಸಲಾಗಿದೆ. ವೈದ್ಯಕೀಯ ತಂಡದ ಅಧಿಕೃತ ವರದಿ ಬಂದ ಬಳಿಕ ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.




