ಪುತ್ತೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಿಯಮ ಮೀರಿ ಧ್ವನಿವರ್ಧಕ ಬಳಕೆ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ-ಹಲವರ ವಿರುದ್ಧ ಪ್ರಕರಣ
ಪುತ್ತೂರು: ಸೆ.17ರಂದು ರಾತ್ರಿ ಪುತ್ತೂರು ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ನಡೆಯುತ್ತಿದ್ದ ವೇಳೆ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಜಂಕ್ಷನ್ ಬಳಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಟ್ಯಾಬ್ಲೋದಲ್ಲಿ ನಿಯಮ ಮೀರಿ ಧ್ವನಿವರ್ಧಕವನ್ನು ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ಧ್ವನಿವರ್ಧಕ ಬಳಕೆಯನ್ನು ನಿಲ್ಲಿಸುವಂತೆ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಸಂಬಂಧಪಟ್ಟವರಿಗೆ ಸೂಚಿಸಿದ್ದು, ಟ್ಯಾಬ್ಲೋ ಆಯೋಜಕರು ಧ್ವನಿವರ್ಧಕ ಬಳಕೆಯನ್ನು ಸ್ಥಗಿತಗೊಳಿಸಿದ್ದಾರೆ.
ಆದರೆ ಅಜಿತ್ ರೈ ಹೊಸಮನೆ ಹಾಗೂ ಇತರರು ಸ್ಥಳಕ್ಕೆ ಬಂದು ಧ್ವನಿವರ್ಧಕ ಬಳಕೆ ನಿಲ್ಲಿಸುವುದಕ್ಕೆ ಅಡ್ಡಿಪಡಿಸಿ, ಸ್ಥಳದಲ್ಲಿದ್ದ ಇತರರನ್ನು ಪ್ರಚೋದಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದ ಕುರಿತು ತಿಳುವಳಿಕೆ ನೀಡಿದರೂ ಧ್ವನಿವರ್ಧಕ ಬಳಕೆ ಮುಂದುವರಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಇದೆ.
ಈ ಸಂಬಂಧ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಟ್ಯಾಬ್ಲೋ ಆಯೋಜಕರು ಹಾಗೂ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 113/2026, ಕಲಂ 49, 132, 3(5) BNS 2023 ಹಾಗೂ ಕಲಂ 103, 109 ಕೆಪಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


