ಅಕ್ರಮವಾಗಿ 11 ಜಾನುವಾರುಗಳ ಸಾಗಾಟ: ಆರೋಪಿ ಶಿವಪ್ರಸಾದ್ ಬಂಧನ
ಪುತ್ತೂರು: ಅಕ್ರಮವಾಗಿ 11 ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿದ್ದಾರೆ.

ಅ.5ರಂದು ಬೆಳಗಿನ ಜಾವ ಪುತ್ತೂರು ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಬಳಿ ಪಿಕಪ್ ವಾಹನವನ್ನು ಪೊಲೀಸರು ತಡೆದು ಪರಿಶೀಲಿಸಿದಾಗ, 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿರುವುದು ಪತ್ತೆಯಾಗಿದೆ. ವಾಹನದಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದಾರೆ.
ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಅವರನ್ನು ಪೊಲೀಸರು ಬಂಧಿಸಿದ್ದಾರೆ.

