ಕಡಬ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರ ಮೇ 8ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ಆದೇಶಿಸಿದೆ.

ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ (30) ಶಿಕ್ಷೆಗೊಳಗಾದ ಆರೋಪಿ.
ಈ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 40/2021ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳು ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅಂದಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಯು. ಅವರು ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸುಮಂಗಲಾ ಚಕಲಬ್ಬಿ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.
ಪೋಕ್ಸೊ ಕಾಯ್ದೆ 2012ರ ಕಲಂ 5(l) ಸಹಿತ 6ರ ಅಡಿಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ವರ್ಷದ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಲಾಗಿದೆ.
ಅದೇ ರೀತಿ, ಭಾರತೀಯ ದಂಡ ಸಂಹಿತೆಯ ಕಲಂ 506ರ ಅಡಿಯಲ್ಲಿ ಜೀವ ಬೆದರಿಕೆ ಒಡ್ಡಿದ ಅಪರಾಧಕ್ಕಾಗಿ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷದ ಸಾಧಾರಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಆಡ್ಯಂತಾಯ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

