ಮಂಗಳೂರು: ಮಾದಕ ವಸ್ತು ಎಂಡಿಎಂಎ ವಶ; ಮಹಿಳೆ ಬಂಧನ
ಮಂಗಳೂರು: ಮಂಗಳೂರು ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದು, ಅವರ ವಾಸ್ತವ್ಯದ ಅಪಾರ್ಟ್ಮೆಂಟ್ನಲ್ಲಿ ಸುಮಾರು ₹15.30 ಲಕ್ಷ ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತೆಯನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗುರಿಂಗಾನ ಮನೆ ನಿವಾಸಿ ರಫೀಕ್ ಅವರ ಪತ್ನಿ ನಸೀಮ (42) ಎಂದು ಗುರುತಿಸಲಾಗಿದೆ.
ನ.1ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ವೇಳೆ, ಪ್ರಕರಣದ ಆರೋಪಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಸೀಮಾ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಮಾದಕ ವಸ್ತು ಪೂರೈಕೆ ಜಾಲದ ಕುರಿತು ತನಿಖೆ ಕೈಗೊಂಡ ಪೊಲೀಸರು, ಪಂಪ್ವೆಲ್ ಉಜ್ಜೋಡಿ ಸಮೀಪದ ರಾಧಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನ ಮೊದಲ ಮಹಡಿಯ ಫ್ಲ್ಯಾಟ್ ಗೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದರು.
ಈ ವೇಳೆ ಸುಮಾರು ₹15,30,000 ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಆರೋಪಿತೆಯು ಮಂಗಳೂರು ನಗರದಾದ್ಯಂತ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿಷಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿತೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳು ಭಾಗಿಯಾಗಿರುವ ಶಂಕೆಯಿದ್ದು, ಅವರ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಆರೋಪಿ ಹಾಗೂ ಮಾದಕ ವಸ್ತು ಪತ್ತೆ ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.



