ಚಾರ್ವಾಕ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ–ಓರ್ವ ವಶಕ್ಕೆ
ಕಡಬ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನ.9ರಂದು ಸಂಜೆ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ಕೋಳಿ ಅಂಕದ ಜೂಜಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಡಬ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಉಪನಿರೀಕ್ಷಕ ಸಂತೋಷ್ ಬಿ.ಪಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು.
ಈ ವೇಳೆ ಗುಂಪಾಗಿ ಸೇರಿದ್ದವರು ಪೊಲೀಸರನ್ನು ಕಂಡು ಓಡಿಹೋಗಿದ್ದು, ಅವರಲ್ಲಿ ಚಾರ್ವಾಕ ನಿವಾಸಿ ಬಾಲಕೃಷ್ಣ (46) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆತನ ಬಳಿಯಿಂದ ಜೂಜಾಟದಿಂದ ಗಳಿಸಿದ 1,030 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಅಲ್ಲದೆ, ಸ್ಥಳದಲ್ಲಿದ್ದ ಐದು ಅಂಕದ ಕೋಳಿಗಳು ಹಾಗೂ ಕೋಳಿ ಅಂಕಕ್ಕೆ ಬಳಸುತ್ತಿದ್ದ ಕತ್ತಿಯನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 133/2026ರಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 87, 93 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ 1960ರ ಕಲಂ 11(1)(m)(ii), 11(1)(n) ಮತ್ತು ಬಿಎನ್ಎಸ್ 2023ರ ಕಲಂ 112, 3(5)ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.




