ಸುಳ್ಯದಲ್ಲಿ ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ
ಸುಳ್ಯ: ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ಎರಡು ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನ.18ರಂದು ಬೆಳಗ್ಗಿನ ಜಾವ ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿಯ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿದ್ದ ಇಬ್ಬರನ್ನು ಪತ್ತೆಹಚ್ಚಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸುಳ್ಯದ ಆಲೆಟ್ಟಿ ನಿವಾಸಿಗಳಾದ ಹಾಶಿರ್.ಎ (28) ಮತ್ತು ಸಂಶುದ್ದೀನ್.ಎಸ್.ಎಂ. (25) ಎಂದು ತಿಳಿದು ಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಬಂದಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮುಂದಿನ ಕಾನೂನು ಕ್ರಮಕ್ಕಾಗಿ ಆರೋಪಿಗಳನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಲು ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಜೊತೆಗೆ 15ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.




