ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಅಪರಾಧ ಕ್ರಮಾಂಕ 235/2016, ಕಲಂ 457, 380 ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಮ್ಮಿ ಅಲಿಯಾಸ್ ಜಿಂಕೆ ಜಿಮ್ಮಿ ಅಲಿಯಾಸ್ ಪೈಜಲ್ ಅಲಿಯಾಸ್ ಮಹಮ್ಮದ್ ಪೈಜಲ್ (ವಾಸ: ಬಸ್ತಿ ಪಡ್ಪು, ಉಳ್ಳಾಲ) ಎಂಬಾತ ಆರೋಪಿ ಆಗಿದ್ದಾನೆ.
ಈ ಪ್ರಕರಣವು ನ್ಯಾಯಾಲಯದಲ್ಲಿ ಸಿ.ಸಿ. ನಂ. 191/2021ರಲ್ಲಿ ವಿಚಾರಣೆಯಲ್ಲಿದ್ದು, ಆರೋಪಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ 2026ರಲ್ಲಿ ನ್ಯಾಯಾಲಯವು ಪ್ರಕರಣವನ್ನು ಎಲ್‌ಪಿಸಿ (LPC) ಪ್ರಕರಣವೆಂದು ಪರಿಗಣಿಸಿತ್ತು.
ನ.24ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಆರೋಪಿತನನ್ನು ಪತ್ತೆಹಚ್ಚಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.



