ಕರಾವಳಿಕ್ರೈಂ

ಪುಣಚ: ಪತ್ನಿಯ ಕೊಲೆಗೈದು ಹೃದಯಾಘಾತದಿಂದ ಸಾವು ಎಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು ಶಿಕ್ಷೆ



ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಂಬಿಸಲು ಯತ್ನಿಸಿದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.



2024ರ ಡಿಸೆಂಬರ್ 11ರಂದು ರಾತ್ರಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ ಎಂದು ಆಕೆಯ ಪತಿ ಸಂಜೀವ ನಾಯ್ಕ ನೆರೆಮನೆಯವರಿಗೆ ತಿಳಿಸಿದ್ದ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದರು. ಮೃತದೇಹದಲ್ಲಿ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ಸಂಶಯಾಸ್ಪದ ಸಾವು ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 184/2024ರಂತೆ ಬಿಎನ್‌ಎಸ್ ಕಲಂ 103(1)ರಡಿ ಪ್ರಕರಣ ದಾಖಲಿಸಲಾಗಿತ್ತು.


ಪ್ರಕರಣದ ತನಿಖಾಧಿಕಾರಿಯಾಗಿದ್ದ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್.ಇ. ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಕಲಂ 105ರ ಭಾಗ 2ರಡಿ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ, ಬಿಎನ್‌ಎಸ್ ಕಲಂ 240ರಡಿ 6 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ್ ಅವರು ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!