ಉಡುಪಿ: ನಾಲ್ವರನ್ನು ಹತ್ಯೆಗೈದ ಪ್ರಕರಣ: ಆರೋಪಿ ಪ್ರವೀಣ್ ಚೌಗಲೆ ಡಿ.5ರ ವರೆಗೆ ನ್ಯಾಯಾಂಗ ಬಂಧನಕ್ಕೆ
ಉಡುಪಿ: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಉಡುಪಿ ಪೊಲೀಸರು ಇಂದು ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಯನ್ನು ಡಿ.5 ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಬಂಧಿತ ಆರೋಪಿ ಪ್ರವೀಣ್ ನನ್ನು ನ.15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು, ಗಂಭೀರ ಪ್ರಕರಣದ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ 14 ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದುಕೊಂಡಿದ್ದರು.
ಪ್ರವೀಣ್ ನನ್ನು ಕಸ್ಟಡಿಗೆ ಪಡೆದಿದ್ದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ತನಿಖೆ, ಮಹಜರು, ಹೇಳಿಕೆ, ಆರೋಪಿ ಗುರುತು ಸೇರಿದಂತೆ ಎಲ್ಲ ರೀತಿಯ ತನಿಖೆ ಪ್ರಕ್ರಿಯೆಯನ್ನು ವಾರದೊಳಗೆ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.