ಉಪ್ಪಿನಂಗಡಿ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ತಂಡವನ್ನು ಬಂಧಿಸಿದ ಪೊಲೀಸರು
ಎಂಡಿಎಂಎ ಮಾದಕ ವಸ್ತುವನ್ನು ಸಾಗಾಟ ಮಾಡುತ್ತಿದ್ದ ತಂಡವೊಂದನ್ನು ಬಂಧಿಸಿರುವ ಪೊಲೀಸರು ಅವರಿಂದ 45 ಸಾವಿರ ರೂ. ಮೌಲ್ಯದ 22.4 ಮಿ.ಗ್ರಾಂ. ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನ.27ರಂದು ರಾತ್ರಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಸುಶ್ರುತ ಕೃಷ್ಣ ಜೆ.ಕೆ. (32), ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಸೆಬಾಸ್ಟಿಯನ್ (31), ಕೇರಳ ಇಡುಕ್ಕಿ ಜಿಲ್ಲೆಯ ತೊಡುಪುಯ ತಾಲೂಕಿನ ವನ್ನಪುರಂ ಗ್ರಾಮದ ಅನಿಲ್ ತೋಮಸ್ (31) ಬಂಧಿತ ಆರೋಪಿಗಳು.
ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಹೊಟೇಲ್‍ನ ಎದುರುಗಡೆ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಹಾಗೂ ಸಿಬ್ಬಂದಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಸಂದರ್ಭ ವಾಹನವೊಂದನ್ನು ನಿಲ್ಲಿಸಲು ಸೂಚಿಸಿದಾಗ, ವಾಹನವನ್ನು ನಿಲ್ಲಿಸಿದ ಚಾಲಕ ಹಾಗೂ ವಾಹನದಲ್ಲಿದ್ದವರು ವಾಹನದಿಂದ ಇಳಿದು ಪರಾರಿಯಾಗಲು ಯತ್ನಿಸಿದರು. ಅವರನ್ನು ಹಿಡಿದು ವಿಚಾರಣೆ ನಡೆಸಿದಾಗ ಮಾದಕ ದ್ರವ್ಯ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.