ಪೆರುವಾಯಿ ಗ್ರಾ.ಪಂ ವ್ಯಾಪ್ತಿಯ ಅಭಿವೃದ್ದಿ ಕಾರ್ಯಗಳಿಗೆ ಅನುದಾನಕ್ಕೆ ಆಗ್ರಹಿಸಿ ಗ್ರಾ.ಪಂ ಅಧ್ಯಕ್ಷರಿಂದ ಮುಖ್ಯಮಂತ್ರಿಗೆ ಮನವಿ
ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ, ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿರುವ ನಫೀಸಾ ಕಡೆಂಬಿಲ ಹಾಗೂ ಪೆರುವಾಯಿ ಗ್ರಾಮ ಪಂಚಾಯತ್ ಸದಸ್ಯೆ ರಶ್ಮಿ ಪೆರುವಾಯಿ ಅವರು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರನ್ನು ಭೇಟಿಯಾಗಿ ಪೆರುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರು ವಿಧಾನ ಸೌಧದಲ್ಲಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜ್, ಯುವಜನ ಸೇವೆ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಮೊದಲಾದವರನ್ನು ಭೇಟಿಯಾಗಿ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದರು.
ಮನವಿಗೆ ಸಚಿವರುಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ. ಪೆರುವಾಯಿ ಗ್ರಾ.ಪಂ ವ್ಯಾಪ್ತಿಯ ಸರ್ವತೋಮುಖ ಅಭಿವೃದ್ಧಿ ನನ್ನ ಗುರಿಯಾಗಿದ್ದು ಇದಕ್ಕಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸಹಕಾರದಿಂದ ಸಚಿವರುಗಳಿಗೆ ಮನವಿ ಸಲ್ಲಿಸಿದ್ದೇವೆ, ಗ್ರಾಮದ ಅಭಿವೃದ್ಧಿಗೆ ಶಾಸಕ ಅಶೋಕ್ ರೈ ಅವರು ವಿಶೇಷ ಸಹಕಾರ ನೀಡುತ್ತಿದ್ದಾರೆ ಎಂದು ನಫೀಸಾ ಕಡೆಂಬಿಲ ತಿಳಿಸಿದ್ದಾರೆ. ಗ್ರಾಮದ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಕಾರ್ಯೋನ್ಮುಖರಾಗಿರುವ ಪೆರುವಾಯಿ ಗ್ರಾ.ಪಂ ಅಧ್ಯಕ್ಷರ ನಡೆಗೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.