ಎಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿಗಳ ಆಹ್ವಾನ- ಮುನಿಯಪ್ಪ
ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಈವರೆಗೆ 57,651 ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್ ಗಳನ್ನು ವಿತರಿಸಲಾಗಿದೆ. ಬಾಕಿ ಉಳಿದ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲು ಜಂಟಿ/ಉಪನಿರ್ದೇಶಕರುಗಳಿಗೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.
ಹಿಂದಿನ ಸರಕಾರದ ಅವಧಿಯಲ್ಲಿ ಈ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಚುನಾವಣೆ ಹಾಗೂ ಇನ್ನಿತರ ಕಾರಣಗಳಿಂದ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು. ಅವುಗಳನ್ನು ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಮಾ. 31ರೊಳಗೆ ವಿಲೇವಾರಿ ಮಾಡಿ ಎಪ್ರಿಲ್ 1ರಿಂದ ಹೊಸ ಅರ್ಜಿಗಳ ಆಹ್ವಾನಕ್ಕೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.