ಟಿಕೆಟ್ ಕೈತಪ್ಪುವ ಸಾಧ್ಯತೆ: ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು..?
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮಂಗಳೂರಿನಲ್ಲಿ ಪ್ರತಿಕ್ರಿಯಸಿರುವ ಅವರು, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಅವರ ಆಯ್ಕೆಯನ್ನು ಸ್ವಾಗತಿಸುತ್ತೇನೆ ಎಂದು ಭಾವುಕರಾಗಿ ಹೇಳಿದ್ದಾರೆ.
ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಪಕ್ಷವು ನಿಂತ ನೀರಾಗಬಾರದು. ಹೊಸಬರು ಬರುತ್ತಾ ಇರಬೇಕು. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಳಿನ್ ಅವರಿಗೆ ಈ ಬಾರಿ ಬಿಜೆಪಿ ಲೋಕ ಸಭಾ ಟಿಕೆಟ್ ಕೈ ತಪ್ಪಲಿದೆ ಎನ್ನುವ ಸುದ್ದಿ ಪ್ರಬಲವಾಗಿ ಹರಿದಾಡುತ್ತಿದ್ದು ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಲಿದೆ ಎನ್ನಲಾಗುತ್ತಿದೆ.