ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರು
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಸಂಬಂಧ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಶಾಸಕ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ಪೂರ್ಣಗೊಳಿಸಿ, ಆದೇಶ ಕಾಯ್ದಿರಿಸಿತ್ತು. ಇದೀಗ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ. ಆ ಮೂಲಕ ಭವಾನಿ ರೇವಣ್ಣ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಆದರೆ, ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗಾಗಿ ಅವರನ್ನು ಈ ಜಿಲ್ಲೆಗಳಿಗೆ ಕರೆದೊಯ್ಯಬಹುದು ಎಂದೂ ಹೇಳಿದೆ.