ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ: ವ್ಯಕ್ತಿಯೊಬ್ಬನ ಹತ್ಯೆ ಮಾಡಿ ಮತ್ತೊಬ್ಬ ಆತ್ಮಹತ್ಯೆಗೆ ಶರಣು
ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು ವ್ಯಕ್ತಿಯೊಬ್ಬನ ಹತ್ಯೆ ಮಾಡಿ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಗುರುವಾರ ಫೈರಿಂಗ್ ನಡೆದಿದೆ. ದಾಳಿಯಲ್ಲಿ ಒಬ್ಬ ವ್ಯಕ್ತಿಯ ಹತ್ಯೆಯಾಗಿದ್ದು, ಮತ್ತೊಬ್ಬರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳದಲ್ಲಿದ್ದ ಕಾರು ಮೈಸೂರು ಮೂಲದ್ದು ಎಂಬ ಮಾಹಿತಿ ಲಭ್ಯವಾಗಿದೆ. ಮೃತ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಕಾರಿನ ಹೊರಗಿರುವ ಶವದ ತಲೆಯಲ್ಲಿ ಗಾಯದ ಗುರುತು ಪತ್ತೆಯಾಗಿದೆ. ಸೈಟ್ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.