ಇಂದು ನಡೆಯಬೇಕಿದ್ದ NEET-PG ಪ್ರವೇಶ ಪರೀಕ್ಷೆ ಮುಂದೂಡಿಕೆ
ನವದೆಹಲಿ: ನೀಟ್ -ಪಿಜಿ (NEET-PG) ಅಕ್ರಮದ ಹಿನ್ನೆಲೆಯಲ್ಲಿ ಜೂ.23ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಪರೀಕ್ಷೆಯ ಹೊಸ ದಿನಾಂಕವನ್ನು ಆದಷ್ಟು ಬೇಗ ಪ್ರಕಟಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ. NEET-UG ಫಲಿತಾಂಶ ಮತ್ತು UCG-NET ಪರೀಕ್ಷೆಯ ರದ್ದತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
“ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಯ ಬಗ್ಗೆ ಇತ್ತೀಚಿನ ಆರೋಪಗಳ ಘಟನೆಗಳನ್ನು ಪರಿಗಣಿಸಿ, ಆರೋಗ್ಯ ಸಚಿವಾಲಯವು ವೈದ್ಯಕೀಯ ವಿದ್ಯಾರ್ಥಿಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿಯು ನಡೆಸುವ NEET-PG ಪ್ರವೇಶ ಪರೀಕ್ಷೆಯ ಪ್ರಕ್ರಿಯೆಗಳ ದೃಢತೆಯ ಸಂಪೂರ್ಣ ಮೌಲ್ಯಮಾಪನವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ” ಎಂದು ತಿಳಿದು ಬಂದಿದೆ.
ಇದರ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 23ರಂದು ನಡೆಯಲಿರುವ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗಾಗಿ ಆರೋಗ್ಯ ಸಚಿವಾಲಯವು ಪ್ರಾಮಾಣಿಕವಾಗಿ ವಿಷಾದಿಸುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.