ರಾಜ್ಯದ ಹಿತದೃಷ್ಟಿಯಿಂದ ಸಂಸದರೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ಅಗತ್ಯವಿದೆ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಹಿತದೃಷ್ಟಿಯಿಂದ ಸಂಸದರೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಹಿತದೃಷ್ಟಿಯಿಂದ ನಡೆಯುತ್ತಿರುವ ಸಭೆ ಇದಾಗಿದ್ದು ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಐವರು ಸಚಿವರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಸೇರಿದಂತೆ ಎಲ್ಲಾ 40 ಸಂಸದರು ಸಭೆಯಲ್ಲಿ ಭಾಗವಹಿಸಿದ್ದರು.
ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಚಿವರು ಮತ್ತು ಸಂಸದರು ಹಾಜರಿದ್ದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌ಡಿ ಕುಮಾರಸ್ವಾಮಿ, ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಮತ್ತು ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಂಸದರು ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭಾಗವಹಿಸಿದ್ದರು.