ರಾಜ್ಯ

ಶಿರೂರು: ಗುಡ್ಡ ಕುಸಿದು ಅನಾಹುತ ಸಂಭವಿಸಿದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ರಕ್ಷಣಾ ಕಾರ್ಯದ ಪರಿಶೀಲನೆ

ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದ್ದಾರೆ.

ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಗಂಗಾವಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ನಿಜಕ್ಕೂ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಹಲವು ದಿನಗಳಿಂದ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸ್ಥಳದಲ್ಲಿ ನಿಂತು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗಳು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಗಂಗಾವಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು, ಅಗತ್ಯ ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದ್ದೇನೆ ಎಂದು ಸಿದ್ದರಾಮಯ್ಯ ಟತಿಳಿಸಿದ್ದಾರೆ.

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.

Leave a Reply

Your email address will not be published. Required fields are marked *

error: Content is protected !!