ಇಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ಆರು ಗ್ರಾಪಂ ಮಹಿಳಾ ಅಧ್ಯಕ್ಷರುಗಳು ವಿಶೇಷ ಆಹ್ವಾನಿತರಾಗಿ ಭಾಗಿ
ಬೆಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗೆದರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮಿನರಸಮ್ಮ, ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಫೀಸಾ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಕಮತನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಜೇಶ್ವರಿ ಗುತ್ತಿ, ಕಲಬುರಗಿ ಜಿಲ್ಲೆಯ ತಾಜ್ ಸುಲ್ತಾನಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಜಯಶ್ರೀ, ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಕನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ದೇವಿ ಪಿ.ಟಿ ಮತ್ತು ಚಾಮರಾಜನಗರ ತಾಲೂಕಿನ ಅಟ್ಟಗುಳಿಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿವಮ್ಮ ಇಂದು ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿರುವ ವಿಶೇಷ ಆಹ್ವಾನಿತರಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ನೇತೃತ್ವದಲ್ಲಿ ಈ ತಂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದೆ. ಈ ಆರೂ ಮಂದಿ ಉತ್ತಮ ಆಡಳಿತ, ಪರಿಸರ ಕಾಳಜಿ, ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ, ತೆರಿಗೆ ಸಂಗ್ರಹಣೆ, ನೀರು ಸರಬರಾಜು ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಅತ್ಯಂತ ಬದ್ಧತಾಪೂರ್ವಕವಾಗಿ ನಿರ್ವಹಿಸಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ.