ಡ್ರಗ್ಸ್ ಹಾವಳಿ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚನೆ- ಸಿದ್ದರಾಮಯ್ಯ
ಬೆಂಗಳೂರು: ಡ್ರಗ್ಸ್ ಹಾವಳಿ ತಡೆಗೆ ಸರಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು ಶೇ. 50ರಷ್ಟು ಪ್ರಕರಣಗಳು ಬೆಂಗಳೂರು ನಗರದಲ್ಲಿ ದಾಖಲಾಗಿವೆ. ಮಂಗಳೂರಿನಲ್ಲಿ ಶೇ22 ರಷ್ಟು, ಬೇರೆ ಬೇರೆ ಜಿಲ್ಲೆಗಳಲ್ಲಿ ಶೇ11 ರಷ್ಟು ಕೇಸ್ಗಳಿವೆ. ಡ್ರಗ್ಸ್ ಹಾವಳಿ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಡ್ರಗ್ಸ್ ಹಾವಳಿ ತಡೆಗಟ್ಟಲು ಗೃಹ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು, ಐಟಿಬಿಟಿ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವರು ಜೊತೆ ಸಭೆ ನಡೆಸಿದೆ. ಸಭೆಯಲ್ಲಿ ಬೆಂಗಳೂರಿನ ಪೊಲೀಸ್ ಆಯುಕ್ತರು, ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ತಿಳಿಸಿದರು.
ಡ್ರಗ್ಸ್ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು ಮಾಡುತ್ತೇವೆ. ಡ್ರಗ್ಸ್ ಕೇಸ್ನಲ್ಲಿ ಬಂಧನಕ್ಕೊಳಗಾದರೆ ಜಾಮೀನು ಸಿಗದಂತೆ ಮಾಡುತ್ತೇವೆ. ಡ್ರಗ್ಸ್ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು ಶಿಕ್ಷೆ ಆಗಲಿದೆ. ಎಂದು ಹೇಳಿದರು.
ಗೃಹ ಸಚಿವರು, ಆರೋಗ್ಯ, ವೈದ್ಯಕೀಯ, ನಗರಾಭಿವೃದ್ಧಿ, ಐಟಿಬಿಟಿ ಇಲಾಖೆ ಸಚಿವರುಗಳು ಈ ಟಾಸ್ಕ್ ಫೋರ್ಸ್ನ ಸದಸ್ಯರಾಗಿರುತ್ತಾರೆ.