ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ: ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
ಬೆಂಗಳೂರು: ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಗೆದ್ದರೆ ಈ ಸರ್ಕಾರ ಇರುವುದಿಲ್ಲ ಎಂದು ಹೇಳಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ಉಪಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟ ಮೂರು ಕ್ಷೇತ್ರಗಳನ್ನು ಗೆದ್ದರೆ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಬಹುದು ಎಂದು ಹೇಳಿದರು.
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಪ್ರಧಾನಿ ಮೋದಿಗಾಗಿ ನಾವು ಮೂರು ಕ್ಷೇತ್ರಗಳಲ್ಲಿ ಗೆಲ್ಲಬೇಕು. ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಮೇಲೆ ನಂಬಿಕೆ ಇದೆ. ಮೋದಿ ದೇವೇಗೌಡರ ನಾಯಕತ್ವಕ್ಕೆ ಬೆಂಬಲ ಸಿಗಲಿದೆ ಅನ್ನೋ ವಿಶ್ವಾಸ ಇದೆ. ಬಿಜೆಪಿ ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ ಅಲ್ಲ ಎನ್ಡಿಎ ಅಭ್ಯರ್ಥಿ, ಬಿಜೆಪಿ ಜೆಡಿಎಸ್ ಅಣ್ಣ ತಮ್ಮಂದಿರಂತೆ ಇದ್ದೇವೆ. ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯುವುದು ನಮ್ಮ ಉದ್ದೇಶ ಎಂದರು.