ಆತ್ಮಹತ್ಯೆ ವಿಚಾರವಾಗಿ ಸುಳ್ಳು ಸುದ್ದಿ ಹಬ್ಬಿದ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್
ಆತ್ಮಹತ್ಯೆ ವಿಚಾರವಾಗಿ ಸುಳ್ಳು ಸುದ್ದಿ ಪ್ರಕಟಿಸಿದ್ದ ಆರೋಪದಡಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹಾಗೂ ಇಬ್ಬರು ಸಂಪಾದಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ವಕ್ಫ್ ನೋಟಿಸ್ ಬಂದಿದ್ದೇ ಆತ್ಮಹತ್ಯೆಗೆ ಕಾರಣ ಎಂಬುವುದಾಗಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ‘ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಉಲ್ಲೇಖಿಸಿದ್ದರು. ಇದೀಗ ಈ ಟ್ವೀಟ್ ಅನ್ನು ಅಳಿಸಿ ಹಾಕಲಾಗಿದೆ. ಈ ಕಾರಣದಿಂದ ಇದು ಸುಳ್ಳು ಮಾಹಿತಿ ಎಂದು ದೂರು ದಾಖಲಿಸಲಾಗಿದೆ.
ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂಬುದು ನಮೂದಾಗಿದ್ದರಿಂದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕನ್ನಡ ದುನಿಯಾ ಹಾಗೂ ಕನ್ನಡ ನ್ಯೂಸ್ ಡಿಜಿಟಲ್ ಮಾಧ್ಯಮಗಳ ಇ-ಪೇಪರ್‌ನಲ್ಲಿ ಸುಳ್ಳು ಸುದ್ದಿ ಪ್ರಕಟಿಸಲಾಗಿತ್ತು. ಈ ಬಗ್ಗೆ ಪರಿಶೀಲಿಸಿ ಹಾವೇರಿ ಸೆನ್ (ಸೈಬರ್, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಎಸ್ಪಿ ಅಂಶುಕುಮಾರ ತಿಳಿಸಿದ್ದಾರೆ.