ಮುಸ್ಲಿಮರ ವಿರುದ್ದ ಪ್ರಚೋದನಕಾರಿ ಹೇಳಿಕೆ: ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್
ಶಿವಮೊಗ್ಗ: ಪ್ರಚೋದನಕಾರಿ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತೊಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದು ಅವರ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ.
ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ದ ಮಾತನಾಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ನ.13 ರಂದು ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಕ್ಫ್ ವಿಚಾರವಾಗಿ ಮುಸ್ಲಿಮರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.
ವಕ್ಫ್ ಆಸ್ತಿ ವಿವಾದ ವಿಚಾರದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಈಶ್ವರಪ್ಪ, ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಮುಸ್ಲಿಮರಿಗೆ ರಸ್ತೆಯಲ್ಲಿ ಹುಡುಕಿ ಹುಡುಕಿ ಹೊಡೆಯುತ್ತಾರೆ. ಮುಸ್ಲಿಮರನ್ನು ಕೊಲ್ಲುವಂತಹ ದಿನ ಬರುತ್ತದೆ ಎಂದೆಲ್ಲಾ ತೀರಾ ಪ್ರಚೋದನಕಾರಿಯಾಗಿ ಮಾತನಾಡಿದ್ದರು. ಈ ಸಂಬಂಧ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.