ಬಿಜೆಪಿ ಇನ್ನಾದರೂ ದ್ವೇಷದ ರಾಜಕಾರಣ ಬಿಟ್ಟು ಬಿಡಲಿ- ಸಿದ್ದರಾಮಯ್ಯ
ಬಿಜೆಪಿ ಮತ್ತು ಜೆಡಿಎಸ್ ಅಪಪ್ರಚಾರದ ಮೂಲಕ ಧಾರ್ಮಿಕ ಉನ್ಮಾದಗಳನ್ನು ಸೃಷ್ಟಿಸಿ, ಜಾತಿ-ಧರ್ಮಗಳ ನಡುವೆ ಒಡಕು ಮೂಡಿಸಿ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಪ್ರಯತ್ನಿಸಿದೆ. ಕರ್ನಾಟಕದ ಜಾತ್ಯತೀತ ಮತ್ತು ಶಾಂತಿಪ್ರಿಯ ಸಮಾಜ ಇದನ್ನು ಒಪ್ಪಿಕೊಳ್ಳದೆ ನಮ್ಮನ್ನು ಗೆಲ್ಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು 136 ಸ್ಥಾನಗಳನ್ನು ನೀಡಿ ನಮ್ಮನ್ನು ಗೆಲ್ಲಿಸಿದ್ದಾರೆ. ಆದರೆ ಚುನಾವಣಾ ಫಲಿತಾಂಶದ ಮರುದಿನದಿಂದಲೇ ಬಿಜೆಪಿ ಮತ್ತು ಜೆಡಿಎಸ್ ಕೂಡಿಕೊಂಡು ನಮ್ಮ ಸರ್ಕಾರವನ್ನು ಉರುಳಿಸುವ ಪ್ರಯತ್ನ ಶುರು ಮಾಡಿದ್ದರು. ಸಾವಿರಾರು ಕೋಟಿ ರೂಪಾಯಿಗಳನ್ನು ಸುರಿದು ನಮ್ಮ ಶಾಸಕರನ್ನು ಖರೀದಿಸುವ ದುಷ್ಟ ಪ್ರಯತ್ನ ಮಾಡಿದ್ದರು. ಈ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ರಾಜ್ಯದ ಜನತೆ ಸಹಿಸಿಲ್ಲ ಎನ್ನುವುದನ್ನು ಕೂಡಾ ಈ ಫಲಿತಾಂಶ ಹೇಳಿದೆ.
ನಾವು ಶಿಗ್ಗಾಂವ್ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದಾಗ ಒಂದಷ್ಟು ವಿರೋಧ ವ್ಯಕ್ತವಾಗಿರುವುದು ನಿಜ. ಇದರಿಂದ ಹಿಂದೂ ಮತ ಧ್ರುವೀಕರಣವಾಗುತ್ತದೆ ಎಂಬ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದರು. ನನ್ನ ಮೇಲೆಯೂ ಒತ್ತಡ ಇತ್ತು. ಹೀಗಿದ್ದರೂ ಮುಸ್ಲಿಂ ವ್ಯಕ್ತಿಗೆ ನಾವು ಟಿಕೆಟ್ ಕೊಟ್ಟೆವು. ಜಾತಿ-ಧರ್ಮದ ಭೇದ ಮಾಡದೆ ಸಮರ್ಥ ಅಭ್ಯರ್ಥಿಗೆ ಮತ ಹಾಕಿ ಎಂದು ಕೇಳಿಕೊಂಡೆವು. ಜನ ನಮ್ಮ ಮಾತಿಗೆ ಒಪ್ಪಿಕೊಂಡು ಶಿಗ್ಗಾಂವ್ ನಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಇದು ಬಿಜೆಪಿಯವರ ಕೋಮುವಾದಿ ರಾಜಕಾರಣಕ್ಕೆ ನೀಡಿದ ಉತ್ತರವಾಗಿದೆ ಎಂದು ನಾನು ಭಾವಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಈ ಉಪಚುನಾವಣೆಯ ಸೋಲು ಬಿಜೆಪಿ ನಾಯಕರ ಆತ್ಮಾವಲೋಕನಕ್ಕೆ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ. ಇನ್ನಾದರೂ ಅವರು ದ್ವೇಷದ ರಾಜಕಾರಣವನ್ನು ಕೈಬಿಟ್ಟು ರಚನಾತ್ಮಕ ವಿರೋಧಪಕ್ಷವಾಗಿ ಕೆಲಸ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.