ವಿದ್ಯುತ್ ದರ ಹೆಚ್ಚಳ: ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು: ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ. ಪ್ರತೀ ಯೂನಿಟ್ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ ಮತ್ತು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಅಕ್ಟೋಬರ್ 1ರಿಂದ ವಿದ್ಯತ್ ದರ ಹೆಚ್ಚಿಸಿರುವ ಸರಕಾರದ ಕ್ರಮವನ್ನು ಟೀಕಿಸಿ ‘ನವರಾತ್ರಿಗೆಕರೆಂಟ್ ಶಾಕ್’ ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರ ವಿದ್ಯುತ್ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನ ಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ ಆಗಿದೆ! ಏನೀ ಹುನ್ನಾರ? ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ. ಪ್ರತೀ ಯೂನಿಟ್ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ ಮತ್ತು ಖಂಡನೀಯ ಎಂದು ಹೇಳಿದ್ದಾರೆ.