ರೈತರ ಆಸ್ತಿ ಜಪ್ತಿಗೆ ಅವಕಾಶವಿಲ್ಲ: ಬೊಮ್ಮಾಯಿ
ಚಿತ್ರದುರ್ಗ: ರೈತ ವಿರೋಧಿ ಕಾಯ್ದೆಗಳಿಗೆ ತಿದ್ದುಪಡಿ ತರುವುದರ ಮೂಲಕ ರೈತರಿಗೆ ಸಾಲ ತೀರಿಸುವ ಅವಕಾಶ ಮಾಡಿಕೊಟ್ಟು, ಮನೆ, ಆಸ್ತಿ ಜಪ್ತಿ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಗ್ರಾಮದ ತರಳಬಾಳು ಮಠದ ಅವರಣದಲ್ಲಿ ಶನಿವಾರ ಏರ್ಪಡಿಸಿದ್ದ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 30ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಆಗುವ ಅಂತಿಮ ಘಟ್ಟದಲ್ಲಿದೆ. ಕೇಂದ್ರ ಸಚಿವ ಸಂಪುಟದ ಅನುಮೋದನೆ ದೊರೆತ ತಕ್ಷಣವೇ ₹14 ಸಾವಿರ ಕೋಟಿ ನೆರವು ಸಿಗಲಿದೆ. ಈ ಯೋಜನೆ ಪೂರ್ಣಗೊಳ್ಳಲು ದೊಡ್ಡ ಹಣಕಾಸಿನ ಶಕ್ತಿ ಬರಲಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು
‘ರಾಜ್ಯದಲ್ಲಿ 14 ಲಕ್ಷ ರೈತರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕೃಷಿ ಕಾರ್ಮಿಕರು, ನೇಕಾರರು, ಮೀನುಗಾರರು, ಟ್ಯಾಕ್ಸಿ ಚಾಲಕರ ಮಕ್ಕಳು ಸೇರಿ ದುಡಿಯುವ ವರ್ಗದ ಮಕ್ಕಳಿಗೆ ರೈತವಿದ್ಯಾನಿಧಿ ಯೋಜನೆ ವಿಸ್ತರಿಸಲಾಗುವುದು .ಯಾವುದೇ ಕಾರಣಕ್ಕೂ ಹಣಕಾಸಿನ ಅಡಚಣೆಯಿಂದ ರೈತರ ಮಕ್ಕಳ ವಿದ್ಯಾಭ್ಯಾಸ ಮೊಟಕಾಗಬಾರದು’ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ‘ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಕೆರೆ, ಕಟ್ಟೆ ಜಲಾಶಯ ತುಂಬಿವೆ. ಕೆಲವು ಭಾಗದಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿದೆ. ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವ ಭರವಸೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಫಸಲ್ ಬೀಮಾ ಯೋಜನೆಯಡಿ ದೇಶಾದ್ಯಂತ ರೈತರು ₹26 ಸಾವಿರ ಕೋಟಿ ಬೆಳೆ ವಿಮೆ ಕಂತು ಪಾವತಿ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ರೈತ ಸಮೂಹಕ್ಕೆ ₹ 1 ಲಕ್ಷ ಕೋಟಿ ಪರಿಹಾರ ನೀಡಲಾಗಿದೆ’ ಎಂದು ಹೇಳಿದರು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಧುಸ್ವಾಮಿ ಮಾತನಾಡಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದಾಗ ಪರಿಸ್ಥಿತಿ ಸರಿ ಇರಲಿಲ್ಲ. ಪ್ರವಾಹ ಹಾಗೂ ಕೋವಿಡ್ ಕಾರಣಕ್ಕೆ ಹಲವು ಸಮಸ್ಯೆ ಎದುರಿಸಬೇಕಾಯಿತು. ಅವರ ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು ಸರ್ಕಾರ ನಡೆಸುವುದು ಸುಲಭವಾಗಿ ಇರಲಿಲ್ಲ. ಯಾರು ಏನೇ ಮಾತನಾಡಬಹುದು, ಆಕಾಶಕ್ಕೆ ಏಣಿ ಹಾಕುವುದಾಗಿ ಹೇಳಬಹುದು. ಆದರೆ, ಪರಿಸ್ಥಿತಿ ಭಿನ್ನವಾಗಿದೆ. ಎಲ್ಲವನ್ನೂ ಹೇಳುತ್ತ ಕೂರುವ ಕಾಲ ಇದಲ್ಲ ಎಂದು ಹೇಳಿದರು.