ಬಿಜೆಪಿ ಯಲ್ಲಿ ಮತ್ತೆ ಭಿನ್ನಮತ ಸ್ಫೋಟ: ರಾಜ್ಯಾಧ್ಯಕ್ಷರ ವಿರುದ್ಧವೇ ಹರಿಹಾಯ್ದ ಸಂಸದ ಡಾ.ಕೆ ಸುಧಾಕರ್
ಬೆಂಗಳೂರು: ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಹಾಗೂ ಶ್ರೀರಾಮುಲು ನಂತರ ಇದೀಗ ವಿಜಯೇಂದ್ರ ವಿರುದ್ಧ ಮತ್ತೊಬ್ಬ ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ. ಕೆ. ಸುಧಾಕರ್ ಅವರು ಬಹಿರಂಗ ವಾಗ್ದಾಳಿ ನಡೆಸಿದ್ದಾರೆ.

ಆ ಮೂಲಕ ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದ್ದು, ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸಂದೀಪ್ ಅವರನ್ನು ಆಯ್ಕೆ ಮಾಡಿರುವುದರಿಂದ ಸಿಡಿದೆದ್ದಿರುವ ಸುಧಾಕರ್ ಇಂದು ಬೆಂಗಳೂರಿನಲ್ಲಿ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
ಜಿಲ್ಲಾಧ್ಯಕ್ಷರ ನೇಮಕದಲ್ಲಿ ವಿಜಯೇಂದ್ರ ಅವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದ ಆರೋಪಿಸಿದ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಸುಧಾಕರ್ ಅವರು, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ತಮಗೆ ಬೇಕಾದವರಿಗೆ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಪಾಧ್ಯಕ್ಷರನ್ನು ಮಾಡಿಕೊಂಡಿದ್ದಾರೆ. ಇವತ್ತಿನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಧೋರಣೆ ಬೇಸರ ತಂದಿದೆ ಎಂದು ಅಸಮಾಧಾನ ಹೊರಹಾಕಿದರು.