ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಈ ಬಾರಿ ಗ್ರೇಸ್ ಮಾರ್ಕ್ಸ್ ಇಲ್ಲ, ಉತ್ತೀರ್ಣರಾಗಲು ಕನಿಷ್ಠ ಅಂಕ ಶೇ.35ಕ್ಕೆ ನಿಗದಿ
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ತಂದಿದ್ದ ಶೇ.10ರಷ್ಟು ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಈ ವರ್ಷದಿಂದ ರದ್ಧು ಮಾಡಲಾಗಿದ್ದು 2024ಕ್ಕೂ ಹಿಂದೆ ಇದ್ದಂತೆ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ ಅಂಕವನ್ನು ಶೇ 35ಕ್ಕೆ ನಿಗದಿ ಮಾಡಲಾಗಿದೆ.

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಸಿದ್ಧತೆ ಕುರಿತು ಶಿಕ್ಷಣ, ಗೃಹ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು, ಉಪ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ಗಳ ಸಿಇಒಗಳೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗುರುವಾರ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತುಕತೆ ನಡೆಸಿದರು.
ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುವುದಲ್ಲದೆ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನಸ್ಥಿತಿಗೆ ಅಡ್ಡಿಯಾಗಿದೆ ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಅಲ್ಲದೆ, ವಿವಿಧ ವಲಯಗಳಿಂದ ತೀವ್ರ ಟೀಕೆಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರೇಸ್ ಅಂಕಗಳನ್ನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.