ಕರಾವಳಿರಾಜ್ಯ

ರಾಜ್ಯದಲ್ಲಿ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಇನ್ನೂ 1 ವಾರ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಅದರಲ್ಲೂ ಮಂಗಳವಾರ ಮತ್ತು ಬುಧವಾರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಸಾಂದರ್ಭಿಕ ಚಿತ್ರ

ಹವಾಮಾನ ಇಲಾಖೆ ವರದಿಯಂತೆ ಮಂಗಳವಾರ ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಗಾಳಿ ಸಹಿತ ಭಾರೀ ಮಳೆಯ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಬೆಂಗಳೂರು ಮಹಾನಗರದಲ್ಲಿ ಮಳೆಯ  ಅಬ್ಬರ ಮುಂದುವರಿದಿದೆ. ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಜಯನಗರ, ಚಾಮರಾಜಪೇಟೆ, ಬನಶಂಕರಿ, ಶಾಂತಿನಗರ, ವಿಜಯನಗರ, ಚಂದ್ರಾಲೇಔಟ್, ರಾಜಾಜಿನಗರ, ಆರ್.ಟಿ.ನಗರ, ಹೆಬ್ಬಾಳ, ಮಲ್ಲೇಶ್ವರಂ, ಕೋರಮಂಗಲ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಯಶವಂತಪುರ, ಪೀಣ್ಯ, ಬಿಟಿಎಂ ಲೇಔಟ್ ಸೇರಿ ಹಲವೆಡೆ ರಾತ್ರಿಯಿಂದಲೇ ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ಪೈಕಿ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಬೆಳಗ್ಗೆ ಮಳೆ ಜೋರಾಗಿದೆ. ಪರಿಣಾಮವಾಗಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.


ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ಮರಗಳು ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಹಲವು ರಸ್ತೆಗಳಲ್ಲಿ ನಿಧಾನಗತಿಯ ಸಂಚಾರ ಇದೆ. ಒಟ್ಟಿನಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು ಹಲವು ಕಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

Leave a Reply

Your email address will not be published. Required fields are marked *

error: Content is protected !!