ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಾಗೂ ಖಾಸಗಿ ಚಾನೆಲ್ ನ ವರದಿಗಾರನ ಮೇಲಿನ ಹಲ್ಲೆ- ಜಿಲ್ಲಾ ಎಸ್ಪಿ ಹೇಳಿದ್ದೇನು
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಆ.6ರಂದು ನಡೆದ ಘಟನೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಮಾಹಿತಿ ನೀಡಿದ್ದು ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಈ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ಯುಟ್ಯೂಬರ್ ಗಳ ಮೇಲಿನ ಹಲ್ಲೆ, ವಾಹನಗಳಿಗೆ ಹಾನಿ ಹಾಗೂ ಖಾಸಗಿ ನ್ಯೂಸ್ ಚಾನೆಲ್ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಧರ್ಮಸ್ಥಳದ ಪಾಂಗಳದಲ್ಲಿ ಹಾಗೂ ಪೋಲಿಸ್ ಠಾಣಾ ಆವರಣದಲ್ಲಿ ಮತ್ತು ಉಜಿರೆಯ ಖಾಸಗಿ ಆಸ್ಪತ್ರೆಯ ಮುಂದೆ ಕಾನೂನು ಬಾಹಿರವಾಗಿ ಗುಂಪು ಸೇರಿದವರ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದ ಅವರು, ಹಲ್ಲೆಗೆ ಒಳಗಾಗಿರುವವರು ದಾಖಲಾಗಿರುವ ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆಯಲಾಗಿದ್ದು ಯಾವುದೇ ಗಂಭೀರ ಗಾಯಗಳಿಲ್ಲ ಎಂದು ತಿಳಿಸಿದ್ದಾರೆ.
ಆ.6ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ವೀಡಿಯೋಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ. ತಿಳಿಸಿದ್ದಾರೆ