ಟಿವಿಕೆ ರ್ಯಾಲಿಯಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಸಂಖ್ಯೆ 39ಕ್ಕೇರಿಕೆ
ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ಟಿವಿಕೆ ಪಕ್ಷದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 39 ಜನರು ಸಾವನ್ನಪ್ಪಿದ್ದಾರೆ. ಈ ಬೆನ್ನಲ್ಲೇ ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ವಿಜಯ್ ಅವರು ಸಾವು ಹಾಗೂ ನೋವುಗಳ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದಾರೆ.

ಘಟನೆ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಜಯ್, “ನನ್ನ ಹೃದಯ ಛಿದ್ರವಾಗಿದೆ. ಪದಗಳಲ್ಲಿ ವ್ಯಕ್ತಪಡಿಸಲಾಗದ ಅಸಹನೀಯ, ವರ್ಣನಾತೀತ ನೋವು ಮತ್ತು ದುಃಖದಲ್ಲಿ ನಾನು ನರಳುತ್ತಿದ್ದೇನೆ. ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ ಸಹೋದರಿಯರ ಕುಟುಂಬಗಳಿಗೆ ನನ್ನ ಸಂತಾಪ ಮತ್ತು ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತಪಟ್ಟವರ ಕುಟುಂಬಕ್ಕೆ ತಲಾ 20 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ನಟ ವಿಜಯ್ ರ್ಯಾಲಿಯ ವೇಳೆ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.