ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ
ಅನ್ನ ಭಾಗ್ಯ ಯೋಜನೆಯಡಿ ಒಟ್ಟು 10 ಕೆಜಿ ಅಕ್ಕಿ ನೀಡುತ್ತಿದ್ದು, ಇನ್ನುಮುಂದೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು, ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ, ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ ಎಂದರು.
ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆ.ಜಿ ಅಕ್ಕಿಯ ಬದಲಾಗಿ 61.19 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ ಎಂದರು.
ಇಂದಿರಾ ಕಿಟ್ನಲ್ಲಿ 1 ಕೆ.ಜಿ ತೊಗರಿ ಬೇಳೆ, 1 ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಉಪ್ಪು ಇರಲಿದೆ ಎಂದು ಸಚಿವರು ತಿಳಿಸಿದರು.
ಈ ಬಗ್ಗೆ ಮಾತನಾಡಿದ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು, ಕುಟುಂಬದಲ್ಲಿ ಒಬ್ಬರು, ಇಬ್ಬರು ಮಾತ್ರ ಇದ್ದರೆ ಅರ್ಧರ್ಧ ಕೆ.ಜಿ ಇರುವ ಕಿಟ್ ನೀಡಲಾಗುತ್ತದೆ. ಕುಟುಂಬದಲ್ಲಿ ಮೂರು ನಾಲ್ಕು ಮಂದಿ ಸದಸ್ಯರು ಇದ್ದರೆ ಒಂದೊಂದು ಕೆ.ಜಿಯ ಕಿಟ್ ನೀಡಲಾಗುತ್ತದೆ. ಐದಕ್ಕಿಂತ ಹೆಚ್ಚು ಮಂದಿ ಸದಸ್ಯರು ಇದ್ದರೆ ಒಂದೂವರೆ ಕೆ.ಜಿ ಇರುವ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ವಿವರಿಸಿದರು.



