ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಮಸೂದೆಯನ್ನು ವಿರೋಧಿಸುತ್ತಾರೆ-ಸಿದ್ದರಾಮಯ್ಯ
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ ? ಎಂದು ಪ್ರಶ್ನಿಸಿದರು.
ಶಾಂತಿ ಹಾಗೂ ಭಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಲಾಗಿದೆ ಎಂದರು. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿಯೇ ಎಂದು ಅವರು ಹೇಳಿದರು.




