ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ
ಬಂಟ್ವಾಳ: ಕಾಲೇಜಿಗೆ ತೆರಳಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೋರ್ವಳಿಗೆ ಯುವಕನೊಬ್ಬ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ ಘಟನೆ ಇಂದು (ಜು.6) ಬೆಳಗ್ಗೆ ಬಂಟ್ವಾಳ ಮೊಂತಿಮಾರು ಬಸ್ ನಿಲ್ದಾಣದ ಬಳಿ ನಡೆದಿದೆ.

ಬಂಟ್ವಾಳ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂಬಾತನೇ ಹಲ್ಲೆ ನಡೆಸಿದ ಆರೋಪಿ. ಈತ ಇಂದು ಬೆಳಗ್ಗೆ ಸುಮಾರು 08:45 ರ ವೇಳೆಗೆ ಬಸ್ ನಿಲ್ದಾಣದಲ್ಲಿದ್ದ 17 ವರ್ಷದ ಅಪ್ರಾಪ್ತ ಬಾಲಕಿಯ ತಲೆ ಮತ್ತು ಕೈಗೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.
ಕೃತ್ಯ ಎಸಗಿದ ಬೆನ್ನಲ್ಲೇ ಆರೋಪಿ ಮೊಹಮ್ಮದ್ ಜವ್ವಾರ್ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಗಾಯಾಳು ಬಾಲಕಿಯನ್ನು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.





