ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಖಾಸಗಿ ಬಸ್ ಕಂಡಕ್ಟರ್ ಬಂಧನ
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್ಸಿನೊಳಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಬಸ್ ಕಂಡಕ್ಟರ್ನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಇರ್ಫಾನ್ (32), ತಂದೆ ಅಬುಸಾಲಿ, ಮೂಲ ನಿವಾಸಿ ಕಲ್ಲೇರಿ ಮನೆ, ಉಪ್ಪಿನಂಗಡಿ ಹಾಗೂ ಪ್ರಸ್ತುತ ಕರ್ವೇಲು, ಉಪ್ಪಿನಂಗಡಿಯ ಅಬುಬಕರ್ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿರುವವನಾಗಿ ಗುರುತಿಸಲಾಗಿದೆ. ಆತ ಮಂಗಳೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ.
ಪೊಲೀಸರ ಮಾಹಿತಿ ಪ್ರಕಾರ, ಜುಲೈ 9ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಆರೋಪಿತನು ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ ಅಸಭ್ಯ ಸನ್ನೆಗಳನ್ನು ಮಾಡಿದ್ದಲ್ಲದೆ, ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಈ ಕುರಿತು ದಾಖಲಾಗಿದ ದೂರಿನ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಜುಲೈ 10ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.




