ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ವಿರುದ್ಧ ಪೊಕ್ಸೊ ಪ್ರಕರಣ ದಾಖಲು
ಸುಳ್ಯ: ಶಾಲೆಗೆ ಗೈರಾಗುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ವಿಚಾರಿಸಿದ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಪಿರ್ಯಾದಿದಾರರಾಗಿರುವ ಶಾಲೆಯ ಮುಖ್ಯೋಪಾಧ್ಯಾಯರು ನೀಡಿದ ದೂರಿನ ಪ್ರಕಾರ, ವಿದ್ಯಾರ್ಥಿನಿ ಶಾಲೆಗೆ ಹಾಜರಾಗದೇ ಇದ್ದ ಹಿನ್ನೆಲೆಯಲ್ಲಿ ಆಕೆಯನ್ನು ವಿಚಾರಿಸಿದಾಗ, ನೆರೆಮನೆಯ ನಿವಾಸಿ ಹಾಗೂ ಪರಿಚಯಸ್ಥನಾದ ಮಂಜುನಾಥ ಎಂಬಾತನು 2026ರ ಜೂನ್ 22ರಿಂದ ಜುಲೈ 9ರ ನಡುವಿನ ಅವಧಿಯಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿದು ಬಂದಿದೆ.

ದೂರಿನ ಆಧಾರದ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




