ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ –ಬೆಳ್ತಂಗಡಿ ಮೂಲದ ಇಬ್ಬರ ಬಂಧನ
ಮಂಗಳೂರು: “ಡ್ರಗ್ಸ್ ಫ್ರಿ ಮಂಗಳೂರು” ಅಭಿಯಾನದ ಅಂಗವಾಗಿ ಮಂಗಳೂರು ನಗರ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 5 ಕೋಟಿ 20 ಲಕ್ಷ ರೂ. ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡು, ಬೆಳ್ತಂಗಡಿ ಮೂಲದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಜೂನ್ 25ರಂದು ಅಣ್ಣಪ್ಪ ಸ್ವಾಮಿ @ ಮನು ಎಂಬಾತನನ್ನು ಬಂಧಿಸಿ, ಆತನಿಂದ 15.17 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣದ ತನಿಖೆ ವೇಳೆ ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ಮಹತ್ವದ ಮಾಹಿತಿ ಲಭಿಸಿತ್ತು.
ಅದರ ಆಧಾರದ ಮೇಲೆ ಸಿಸಿಬಿ ತಂಡ ಜುಲೈ 15ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್‌ನಲ್ಲಿ ದಾಳಿ ನಡೆಸಿ, ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ಸಾಗಿಸುತ್ತಿದ್ದ ಮೊಹಮ್ಮದ್ ಅಲ್ಫಾಜ್ (28) ಹಾಗೂ ಮೊಹಮ್ಮದ್ ಮುಸ್ತಾಫಾ (28) ಅವರನ್ನು ಬಂಧಿಸಿದೆ. ಆರೋಪಿಗಳಿಂದ ಒಟ್ಟು 5 ಕೆಜಿ 196 ಗ್ರಾಂ ಎಂಡಿಎಂಎ, ಅಂದಾಜು 5.20 ಕೋಟಿ ರೂ. ಮೌಲ್ಯದ ಮಾದಕ ವಸ್ತು, ಬ್ಯಾಗ್ ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕಾರಿನ ಮೂಲಕ ದೆಹಲಿಯಿಂದ ಎಂಡಿಎಂಎ ಖರೀದಿಸಿ, ಬೆಂಗಳೂರನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ವಿವಿಧ ಭಾಗಗಳಿಗೆ ಪೂರೈಕೆ ಮಾಡುತ್ತಿದ್ದರು ಎಂಬ ಮಾಹಿತಿ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿ ಮೊಹಮ್ಮದ್ ಅಲ್ಫಾಜ್ ವಿರುದ್ಧ ಈ ಹಿಂದೆ 2024ರಲ್ಲಿ ಕೊಣಾಜೆ ಪೊಲೀಸ್ ಠಾಣೆ ಹಾಗೂ 2026ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಅಂತರರಾಜ್ಯ ಮಾದಕ ವಸ್ತು ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ಈ ಯಶಸ್ವಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಸಿದ್ದಾರೆ.




