ವಿವಾಹಿತೆಯ ಅನುಮಾನಾಸ್ಪದ ಸಾವು: ಮೂವರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಕೌಟುಂಬಿಕ ಕಿರುಕುಳದಿಂದಾಗಿ ವಿವಾಹಿತೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತೆಯ ಮಾವ, ಅತ್ತೆ ಹಾಗೂ ನಾದಿನಿ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಜುಬೈದ್ (43) ಅವರ ಪುತ್ರಿ ಫಾತಿಮತ್ ನಿಶಾನ ಅವರನ್ನು ನಾಲ್ಕು ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ಜು.18ರಂದು ರಾತ್ರಿ ಫಾತಿಮತ್ ನಿಶಾನ ಅವರು ತಾಯಿಗೆ ಕರೆ ಮಾಡಿ, ತನ್ನ ಮಾವ, ಅತ್ತೆ, ಹಾಗೂ ನಾದಿನಿ ಅವರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಪ್ರಕಾರ, ತಂದೆ ಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಫೋನ್ ಅನ್ನು ಕಸಿದುಕೊಂಡ ಮಾವ ಅಲವಿ ಅವರು, “ನಿನ್ನ ಮಗಳನ್ನು ಕೊಲ್ಲುತ್ತೇನೆ” ಎಂದು ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ.
ಈ ಮಾಹಿತಿ ತಿಳಿದ ಬಳಿಕ ಪಿರ್ಯಾದಿದಾರರು ಮಗಳ ಮನೆಗೆ ತೆರಳಿದಾಗ, ಫಾತಿಮತ್ ನಿಶಾನ ಮೃತಪಟ್ಟಿರುವುದು ಕಂಡುಬಂದಿದೆ. ಕೌಟುಂಬಿಕ ಮನಸ್ತಾಪದ ಹಿನ್ನೆಲೆಯಲ್ಲಿ ತನ್ನ ಮಗಳನ್ನು ಆರೋಪಿಗಳಾದ ಮಾವ ಅಲವಿ, ಅತ್ತೆ ಆಯಿಷ ಹಾಗೂ ನಾದಿನಿ ಫಸೀಲಾ ಕೊಲೆ ಮಾಡಿರುವುದಾಗಿ ಜುಬೈದ್ ಅವರು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.100/2026, ಕಲಂ 85, 103(1) ಸಹಪಠಿತ 3(5) ಭಾರತೀಯ ನ್ಯಾಯ ಸಂಹಿತೆ (BNS)-2023ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.




