ಬಂಟ್ವಾಳ: ಶಾಲಾ ಬಸ್ ಮೇಲೆ ಮರ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಪ್ರಕರಣ: ಶ್ರೀರಾಮ ವಿದ್ಯಾ ಕೇಂದ್ರದ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ಜುಲೈ 22ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬರಿಮಾರ್‌ನಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಇತರ ಕೆಲವು ಮಕ್ಕಳು ಗಾಯಗೊಂಡ ಪ್ರಕರಣದ ತನಿಖೆಯಲ್ಲಿ ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ.

ಈ ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್. ಸಂಖ್ಯೆ 35/2026, ಕಲಂ 194 BNS ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ವೇಳೆ ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ಶಾಲಾ ವಾಹನದ ದಾಖಲೆಗಳ ಪರಿಶೀಲನೆ ನಡೆಸಲಾಗಿದ್ದು, ಅಪಘಾತ ಸಂಭವಿಸಿದ ವೇಳೆ ವಾಹನದ ವಿಮಾ ಹಾಗೂ ಅರ್ಹತಾ ಪ್ರಮಾಣಪತ್ರ ಅವಧಿ ಮುಗಿದಿದ್ದು, ಅವು ಚಾಲ್ತಿಯಲ್ಲಿರಲಿಲ್ಲ ಎಂಬುದು ತಿಳಿದುಬಂದಿದೆ.
ಇದಲ್ಲದೆ, ವಾಹನವನ್ನು ಶ್ರೀರಾಮ ವಿದ್ಯಾ ಕೇಂದ್ರದ ಹೆಸರಿನಲ್ಲಿ ನೋಂದಣಿ ಮಾಡದೇ, ಬೇರೆ ಟ್ರಸ್ಟ್‌ನ ಮಾಲಕತ್ವದಲ್ಲಿ ನೋಂದಾಯಿಸಿರುವುದೂ ತನಿಖೆಯಲ್ಲಿ ಬಹಿರಂಗವಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆಗೆ ಧಕ್ಕೆಯಾಗುವ ರೀತಿಯಲ್ಲಿ ಅಗತ್ಯ ದಾಖಲೆಗಳಿಲ್ಲದ ವಾಹನವನ್ನು ಸಾರ್ವಜನಿಕ ರಸ್ತೆಯಲ್ಲಿ ಸಂಚರಿಸಲು ಅವಕಾಶ ನೀಡಿದ ಆರೋಪದ ಮೇರೆಗೆ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 109/2026ರಡಿ ಕಲಂ 125 BNS ಹಾಗೂ 196, 192(1) IMV Act ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.




