ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿ ಎಂ.ಎಸ್ ಮಹಮ್ಮದ್
ಪುತ್ತೂರು: ದ.ಕ ಜಿಲ್ಲಾ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರ ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು ಈಗಾಗಲೇ ಎಐಸಿಸಿ ರೂಪಿಸಿದ ‘ಸಂಘಟನ್ ಸೃಜನ್ ಅಭಿಯಾನ್’ ಮೂಲಕ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಜಿಲ್ಲಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಎಂ.ಎಸ್ ಮಹಮ್ಮದ್ ಅವರು ಜು.28ರಂದು ಪಕ್ಷದ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಪಕ್ಷಕ್ಕಾಗಿ ಹಲವಾರು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದೇನೆ, ಅವಕಾಶ ಸಿಕ್ಕಿದರೆ ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಎಂ.ಎಸ್ ಮಹಮ್ಮದ್ ತಿಳಿಸಿದ್ದಾರೆ. ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಾ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಎಂ.ಎಸ್ ಮಹಮ್ಮದ್ ಅವರನ್ನು ಎಂಎಲ್ಸಿ ಮಾಡಬೇಕು ಇಲ್ಲವೇ ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಬೇಕೆಂದು ಆಗ್ರಹಿಸಿ ಇತ್ತೀಚೆಗೆ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಕೂಡಾ ನಡೆಸಿದ್ದರು.





